1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಇಲ್ಲಿನ ಸುವರ್ಣ ಸೌಧದ ಆವರಣದಲ್ಲಿ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ಬೆಳಗಾವಿ ಸುವರ್ಣ ಸೌಧದ ಎದುರು ಗಾಂಧೀಜಿ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ ಎಂದರು.
ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ ಜರುಗಿದ ಅಧಿವೇಶನದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಕರೆ ನೀಡಿದ್ದರು ಆದ್ದರಿಂದ ಈ ನೆಲ ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಗಾಂಧೀಜಿಯವರು 1924 ರಲ್ಲಿ ಕಾಂಗ್ರೆಸ್ ನ ಐತಿಹಾಸಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಮಹಾತ್ಮಾ ಗಾಂಧೀಜಿ ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು. ಇಂದಿನ ಯುವಜನತೆಗೆ ಹಾಗೂ ಮುಂದಿನ ಪೀಳಿಗೆಗೆ ಗಾಂಧೀಜಿಯವರ ವಿಚಾರಧಾರೆಯನ್ನು ತಲುಪಿಸುವ ಉದ್ಧೇಶದಿಂದ ಪುತ್ಥಳಿಯನ್ನು ಸ್ಥಾಪಿಸಲಾಗಿದೆ ಎಂದರು.
ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ, ರಂದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.