ಬೈಲಹೊಂಗಲ:
ತಾಲೂಕಿನ ಸುಕ್ಷೇತ್ರ ಇಂಚಲದಲ್ಲಿ ಡಿಸೆಂಬರ್ 29 ರಿಂದ ಜನವರಿ 2ರವರೆಗೆ 5 ದಿನಗಳ ಕಾಲ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗಳ 86ನೇ ವರ್ಧಂತಿ ಮಹಾಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಲಿವೆ ಎಂದು ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪೂರ್ಣಾನಂದ ಭಾರತಿ ಸ್ವಾಮೀಜಿ ತಿಳಿಸಿದರು.
ಅವರು ಮಂಗಳವಾರ ಸುಕ್ಷೇತ್ರ ಇಂಚಲದಲ್ಲಿ ಜರುಗಿದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಇಂಚಲವು ಪುಣ್ಯಭೂಮಿಯಾಗಿದ್ದು, ಕರ್ನಾಟಕ, ಆಂಧ್ರಪ್ರದೇಶ, ಗೋವಾ ಸೇರಿದಂತೆ ನಾನಾ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುವ ಭಕ್ತರ ಕಾಮಧೇನು ಕ್ಷೇತ್ರವಾಗಿದೆ ಎಂದರು. ಈ ಸಂದರ್ಭದಲ್ಲಿ ವೇದಾಂತ ಪರಿಷತ್, ರಜತ ರಥೋತ್ಸವ, ಮಹಾರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ನಾಡಿನ ವಿವಿಧ ಮಠಾಧೀಶರು ಹಾಗೂ ಮಹಾಮಂಡಲೇಶ್ವರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪುಟ್ಟ ಗ್ರಾಮವಾದ ಇಂಚಲದಲ್ಲಿ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟು, ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಪ್ರಸ್ತುತ ಶಿಕ್ಷಣ ಸಂಸ್ಥೆಯಡಿಯಲ್ಲಿ 26 ಅಂಗ ಸಂಸ್ಥೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿದ್ದಾರೆ ಎಂದು ಪೂರ್ಣಾನಂದ ಭಾರತಿ ಸ್ವಾಮೀಜಿ ವಿವರಿಸಿದರು.
ಜನೆವರಿ 1 ರಂದು ಶ್ರೀ ಶಿವಯೋಗೀ ಶ್ವರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ, ಕಂಪ್ಯೂಟರ್ ತರಬೇತಿ ಕೇಂದ್ರ, ವಿವಿಧ ಪ್ರಯೋಗಾಲಯ ದ ಉದ್ಘಾಟನೆ ಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇರವೇರಿಸುವರು ಜಿಲ್ಲೆಯ ಸಚಿವರು, ಶಾಸಕರು, ಮಠಾಧೀಶರು ಆಗಮಿಸುವರು.
ಮಾಜಿ ಶಾಸಕ ಮಹಾಂತೇಶ ದೊಡಗೌಡ್ರ ಅವರು, ಶ್ರೀಗಳ ಕನಸಿನಂತೆ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೂ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಈ ಸಂಸ್ಥೆಯ ವಿಶೇಷತೆಯಾಗಿದೆ.
ಉತ್ತಮ ಸಂಸ್ಕಾರಯುತ ಶಿಕ್ಷಣ ದೊರೆತರೆ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ನಾಗರಿಕರಾಗುತ್ತಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಶಿಕ್ಷಣ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಆಂಗ್ಲ ಮಾಧ್ಯಮ ಸಿಬಿಎಸ್‌ಇ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದರು. ಪ್ರಸ್ತುತ ಎಲ್‌ಕೆಜಿಯಿಂದ 8ನೇ ತರಗತಿ ವರೆಗೆ 489 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಕೆಜಿಯಿಂದ ಪಿಜಿವರೆಗೆ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಅವರು ಹೇಳಿದರು.
ಉದ್ಯಮಿ ವಿಜಯ ಮೆಟಗುಡ್ಡ, ಕೆಪಿಸಿಸಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ, ಗೌರವ ಕಾರ್ಯದರ್ಶಿ ಎಸ್.ಎನ್. ಕೊಳ್ಳಿ ಮಾತನಾಡಿದರು.
ಸಭೆಯಲ್ಲಿ ಬಸವರಾಜ ಜನ್ಮಟ್ಟಿ, ಸುನೀಲ ಮರಕುಂಬಿ, ಶಿವಾನಂದ ಬೆಳಗಾವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಶಿಕ್ಷಕ ಚಂದ್ರಕಾಂತ ಹೈಬತ್ತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.