ಬೈಲಹೊಂಗಲ: ರಾಜ್ಯ ಸರ್ಕಾರದ ನಿರ್ದೇಶನದಂತೆ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಒದಗಿಸುವ ಉದ್ದೇಶದಿಂದ ತಾಲೂಕಿನಲ್ಲಿ ಉಚಿತ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳ ವಿತರಣಾ ಅಭಿಯಾನಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಯಿತು.
ನಗರದ ತಹಶೀಲ್ದಾರ ಕಚೇರಿ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ನಾಗರಿಕರು ದಾಖಲೆಗಳ ಕೊರತೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸರ್ಕಾರ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುತ್ತಿದೆ ಎಂದು ಹೇಳಿದರು.
ತಹಸೀಲ್ದಾರ್ ಸದಾಶಿವ ಮಕ್ಕೋಜಿ ಮಾತನಾಡಿ, ಜಿಲ್ಲಾಡಳಿತದಿಂದ ತಾಲೂಕಿಗೆ ಸುಮಾರು 1.78 ಲಕ್ಷ ಉಚಿತ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ವಿತರಿಸಲು ಅನುಮೋದನೆ ದೊರೆತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಮನೆ ಮನೆಗೆ ತೆರಳಿ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಿದ್ದು, ನಗರ ಪ್ರದೇಶಗಳಲ್ಲಿ ನಗರಸಭೆಯ ಆಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ಮೂಲಕ ಈ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಪ್ರಮಾಣಪತ್ರಗಳ ವಿತರಣೆಯನ್ನು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಆ್ಯಪ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ ಪ್ರಮಾಣಪತ್ರ ತಲುಪಿರುವ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗುತ್ತಿದ್ದು, ವಿತರಣಾ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಆಗಸ್ಟ್ 8ರೊಳಗೆ ತಾಲೂಕಿನ ಎಲ್ಲ ಅರ್ಹ ಫಲಾನುಭವಿಗಳಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ಉಚಿತವಾಗಿ ವಿತರಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಈ ಅಭಿಯಾನದಿಂದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕ್ಲೇಮ್ ಹಾಗೂ ಆಕ್ಷೇಪಣೆ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಪಡೆಯುವುದು ಸಾರ್ವಜನಿಕರಿಗೆ ಮತ್ತಷ್ಟು ಸುಲಭವಾಗಲಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ವೇಗವಾಗಿ ಮತ್ತು ಸಮರ್ಪಕವಾಗಿ ಪೂರ್ಣಗೊಳಿಸಲು ನೆರವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.